ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷಾ ಅಕ್ರಮ ನಡೆಸಿದ್ರೇ ಕಾನೂನು ಕ್ರಮ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಆರಂಭವಾಗಲಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಅಥವಾ ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾವಹಿಸಲಾಗಿದೆ. ಪರೀಕ್ಷಾ ಕೇಂದ್ರದ 200ಮೀ ಸುತ್ತಲು ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡುವುದು. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್ ಹಾಗೂ ಗೇಮ್ಸ್ ಸೆಂಟರ್ ಕೇಂದ್ರಗಳ ಮೇಲೆ ವಿಶೇಷ ನಿಗಾವಹಿಸಲು ಸೂಚಿಸಿದ್ದಾರೆ.
ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಬರೆಯುವಂತಹ ವಾತಾವರಣ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸುವುದು. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಪರೀಕ್ಷಾ ಅಕ್ರಮ ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ವಿವಿಧ ರೀತಿಯ ಫೇಕ್ ಪೋಸ್ಟ್ ಗಳ ಬಗ್ಗೆ ಗಮನ ಹರಿಸಿ ಅವರ ವಿರುದ್ಧ ಕ್ರಮಕೈಗೊಳ್ಳಲು ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯಿಂದ ಪರೀಕ್ಷೆಗೆ ಬೇಕಾದಂತಹ ಅಗತ್ಯ ಪೂರಕ ವ್ಯವಸ್ಥೆಯನ್ನು ಮೊದಲೇ ಕಲ್ಪಿಸಿಬೇಕು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳು 24/7 ಪೊಲೀಸ್ ಭದ್ರತೆ ಮತ್ತು ಸಿಸಿ ಕ್ಯಾಮೆರಾ ನಿಗಾದಲ್ಲಿ ಇರಿಸಲು ತಿಳಿಸಲಾಗಿದೆ.
ವೆಬ್ ಕಾಸ್ಟಿಂಗ್ ಜಾರಿಯಲ್ಲಿರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾ, ವಿದ್ಯುತ್ ಹಾಗೂ ನೆಟ್ವರ್ಕ್ ಸದಾ ಸುಸ್ಥಿತಿಯಲ್ಲಿರುವಂತೆ ಜಾಗೃತಿವಹಿಸುವ ವಹಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳ ಬಗ್ಗೆ ಆಯಾ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜವಬ್ದಾರಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.