ಬೆಂಗಳೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ಚಿಕ್ಕ ವಯಸ್ಸಿನವರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ನಿನ್ನೆ ತಾನೆ ತುಮಕೂರಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹಾಗೂ ಕಲ್ಬುರ್ಗಿ ನಗರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಬೆಂಗಳೂರು ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ.
ಹೌದು ಫೆ.20ರಂದು ಈ ಅವಘಡ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವಕ ತನ್ನ ಗ್ರ‍್ಯಾಂಡ್ ಐಟೆನ್ ಕಾರಿನಲ್ಲಿ ಮೃತಪಟ್ಟಿದ್ದು, ಮೃತದೇಹ ನೋಡಿದ ಅಪರಿಚಿತ ವ್ಯಕ್ತಿ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.