ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮುರುಘಾ ಮಠದಿಂದ ಬಸವ ಪುತ್ಥಳಿ ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ಇದುವರೆಗೂ 35 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು.
ಈ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಏಕಾಂತಯ್ಯ ದೂರು ನೀಡಿರುವ ಹಿನ್ನೆಲೆಯಲ್ಲಿ ಇದೀಗ ಚಿತ್ರದುರ್ಗ ಜಿಲ್ಲಾಡಳಿತದಿಂದ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗೆ, ಎಡಿಸಿ ಕುಮಾರಸ್ವಾಮಿ ಪಿಡಬ್ಲ್ಯೂಡಿ ಅಧಿಕಾರಿಗಳನ್ನು ಒಳಗೊಂಡಿದ್ದ ತನಿಖಾ ಸಮಿತಿ ಇದೀಗ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಮುರುಘಾ ಶರಣರು ಈ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ಇತ್ತೀಚಿಗೆ ತಾನೇ ಬಿಡುಗಡೆ ಆಗಿದ್ದರು. ಇದೀಗ ಬಸವ ಪುತ್ಥಳಿ ನಿರ್ಮಾಣ ಯೋಜನೆಗೆ ಸರ್ಕಾರ ನೀಡಿರುವ 35 ಕೋಟಿ ರೂಪಾಯಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಇದೀಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.