ಬೆಂಗಳೂರು : ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪರೀಕ್ಷಾ ಅಕ್ರಮ ತಡೆಗೆ ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ ಕಣ್ಗಾವಲನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿಸ್ತರಿಸಲಾಗಿದೆ. ಈ ವ್ಯವಸ್ಥೆ ಜಾರಿಯಿಂದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆ ಗೌಪ್ಯತೆ, ಪರೀಕ್ಷೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾಗದಂತೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.
1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಯಾವುದೇ ಕೊಠಡಿಯಲ್ಲಿ ವಿದ್ಯಾರ್ಥಿ ಮಾತನಾಡುವುದು, ನಕಲು ಮಾಡುವುದು, ಕಾಪಿ ಚೀಟಿ ಇಟ್ಟುಕೊಂಡು ಪರೀಕ್ಷೆ ಬರೆಯುವುದು ಇತರೆ ಯಾವುದೇ ಅಕ್ರಮ ನಡೆದರೆ ಅದನ್ನು ವೆಬ್ ಕಾಸ್ಟಿಂಗ್ ಮೂಲಕ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಗಳಲ್ಲಿ ಗಮನಿಸಬಹುದು. ಅಕ್ರಮ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
7.13 ಲಕ್ಷ ವಿದ್ಯಾರ್ಥಿಗಳ ನೋಂದಣಿ
7.13 862 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ತರಗತಿ ವಿದ್ಯಾರ್ಥಿಗಳಿದ್ದಾರೆ. 34,071 ಪುನರಾವರ್ತಿತ, 18,317 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ಐವರು ತೃತೀಯ ಲಿಂಗಿಗಳಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪ್ರಶ್ನೆಪತ್ರಿಕೆಗಳ ರಕ್ಷಣೆಗಾಗಿ ನೇಮಿಸಿರುವ ತಹಶೀಲ್ದಾರ್, ಬಿಇಒ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರನ್ನು ಒಳಗೊಂಡ ವಿಶೇಷ ಪ್ರಶ್ನೆ ಪತ್ರಿಕಾ ಪಾಲಕರ ತ್ರಿಸದಸ್ಯ ಸಮಿತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮ ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್, ಗಾಳಿ-ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳು ಕಲ್ಪಿಸಬೇಕು.
ನಿಷೇಧಾಜ್ಞೆ ಜಾರಿ
ಪರೀಕ್ಷಾ ಗೌಪ್ಯತೆ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163ರ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿಗೊಳಿಸಿ, ಆದೇಶಿಸುವರು. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿಸಿ ಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸಬೇಕು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿ ಟಿವಿ ಅಳವಡಿಸಬೇಕು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಎರಡು ಗಂಟೆ ಮುಂಚಿತವಾಗಿ ಬೆಳಿಗ್ಗೆ 8ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ವೇಳಾಪಟ್ಟಿ :
ಮಾ. 01 ರಂದು ಕನ್ನಡ, ಅರೇಬಿಕ್. ಮಾ. 03-ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ. ಮಾ. 04-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕøತ, ಫ್ರೆಂಚ್. ಮಾ. 05-ರಾಜ್ಯ ಶಾಸ್ತ್ರ, ಸಂಖ್ಯಾ ಶಾಸ್ತ್ರ. ಮಾ. 07-ಇತಿಹಾಸ, ಭೌತಶಾಸ್ತ್ರ. ಮಾ. 10-ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ. ಮಾ. 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ. ಮಾ. 13- ಅರ್ಥ ಶಾಸ್ತ್ರ. ಮಾ. 15- ಇಂಗ್ಲೀಷ್. ಮಾ. 17- ಭೂಗೋಳಶಾಸ್ತ್ರ. ಮಾ. 18-ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ. ಮಾ. 19-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್. ಮಾ.20- ಹಿಂದಿ.
ಪರೀಕ್ಷಾ ದಿನಗಳಂದು “KSRTC ಬಸ್’ ಪ್ರಯಾಣ ಉಚಿತ.!
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:01.03.2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು(ವಾ), ಕರಾರಸಾ ನಿಗಮ ಬೆಂಗಳೂರು ರವರು ಉಲ್ಲೇಖ-1 ರನ್ವಯ ಸುತ್ತೋಲೆಯನ್ನು ಹೊರಡಿಸಿರುತ್ತಾರೆ. ಅದರಂತೆ ಸೂಕ್ತಾಧಿಕಾರಿಗಳಾದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಉಲ್ಲೇಖ-2 ರನ್ವಯ ಅನುಮೋದನೆ ನೀಡಿರುತ್ತಾರೆ.
ಅದರನ್ವಯ ಕ.ಕ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:01.03.2025 ರಿಂದ 20.03.2025 ರವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.
ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.
ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೆಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.