ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ನರ್ಸ್ ಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನರ್ಸ್ ಗಳ ವೇತನ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ NHM ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನರ್ಸ್ ಸಿಬ್ಬಂದಿ ಪ್ರತಿನಿಧಿಗಳು ಆರೋಗ್ಯ ಸೌಧದಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು, ನರ್ಸ್ ಸಂಘಟನೆಯ ಪ್ರತಿನಿಧಿಗಳ ಅಹವಾಲುಗಳನ್ನ ಆಲಿಸಿ ವೇತನ ಹೆಚ್ಚಳ ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
NHM ಯೋಜನೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯಿಂದ ನಡೆಯುತ್ತಿದ್ದು, ವೇತನ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಈ ಬಗ್ಗೆ ಸಭೆ ಕರೆದು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ನರ್ಸ್ ನೇಮಕಾತಿ ವೇಳೆ NHM ಅಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೃಪಾಂಕ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ಇದರೊಂದಿಗೆ ಅಂತರ್ ಜಿಲ್ಲಾ ವರ್ಗಾವಣೆಗೆ ಒಂದು ಬಾರಿ ಅವಕಾಶ ಕಲ್ಪಿಸಲಾಗುವುದು. ಈ ವೇಳೆ ಪ್ರತಿಭಟನೆ ಹಿಂಪಡೆಯುವ ಕುರಿತು ಪ್ರತಿಭಟನಾ ನಿರತ ನರ್ಸ್ ಗಳೊಂದಿಗೆ ಚರ್ಚಿಸಿ ನಾಳೆಯೊಳಗೆ ನಿರ್ಧಾರ ಪ್ರಕಟಿಸುವುದಾಗಿ ಸಂಘಟನೆಯ ಪ್ರತಿನಿಧಿಗಳು ಹೇಳಿದ್ದಾರೆ.