ಹಾಸನ : ಇತ್ತೀಚಿಗೆ ಸರ್ಕಾರಿ ಶಾಲೆಗಳೆಂದರೆ ಪೋಷಕರು ಮೂಗು ಮುರಿಯುತ್ತಿದ್ದಾರೆ. ಏಕೆಂದರೆ ಖಾಸಗಿ ಶಾಲೆಗಳಲ್ಲಿನ ಮೂಲ ಸೌಲಭ್ಯಗಳು ಹಾಗೂ ಶಿಕ್ಷಣ ವ್ಯವಸ್ಥೆ ಸರ್ಕಾರಿ ಶಾಲೆಗಳಲ್ಲಿ ಕಂಡುಬರುವುದಿಲ್ಲ ಎನ್ನುವುದು ಪೋಷಕರ ಆರೋಪವಾಗಿದೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಬಿಟ್ಟು ಪೋಷಕರು ಇದೀಗ ಹೆಚ್ಚಿಗೆ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಮೂಲ ಸೌಲಭ್ಯಗಳ ಕೊರತೆಯಿಂದ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷದಿಂದ ಇದೀಗ 10ಕ್ಕಿಂತ ಕಡಿಮೆ ಸಂಖ್ಯೆ ಇರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ.
ಹೌದು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಶಾಲೆಗಳಿಗೆ ಇದೀಗ ಆಪತ್ತು ಎದುರಾಗಿದೆ. 10ಕ್ಕೂ ಕಡಿಮೆ ವಿದ್ಯಾರ್ಥಿಗಳಿಗೆ ಇರುವ ಶಾಲೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಹಾಸನ ಜಿಲ್ಲೆಯ 579 ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 10ಕ್ಕಿಂತ ಕಡಿಮೆ ಇದೆ. 681 ಸರ್ಕಾರಿ ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ಮಕ್ಕಳ ಸಂಖ್ಯೆ ಇದೆ. 2023-24ನೇ ಸಾಲಿನಲ್ಲಿ 86,231 ಮಕ್ಕಳು ಪ್ರವೇಶ ಪಡೆದಿದ್ದಾರೆ. ಅದೇ 2024-25 ನೇ ಸಾಲಿನಲ್ಲಿ 79,283 ಕ್ಕೆ ಸರ್ಕಾರಿ ಮಕ್ಕಳ ಸಂಖ್ಯೆ ಕುಸಿದಿದೆ. ಒಂದೇ ವರ್ಷಕ್ಕೆ 6948 ಮಕ್ಕಳು ಸರ್ಕಾರಿ ಶಾಲೆಯಿಂದ ದೂರವಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಒಟ್ಟು 1,249 ಕಿರಿಯ ಪ್ರಾಥಮಿಕ ಶಾಲೆಗಳಿವೆ. 969 ಹಿರಿಯ ಪ್ರಾಥಮಿಕ ಶಾಲೆ ಹಾಗು 241 ಪ್ರೌಢಶಾಲೆ ಸೇರಿದಂತೆ ಒಟ್ಟು 2451 ಶಾಲೆಗಳಿವೆ. ಮೂಲ ಸೌಲಭ್ಯಗಳ ಕೊರತೆಯಿಂದ ಮೂರು ವರ್ಷಗಳಲ್ಲಿ 35 ಶಾಲೆ ಬಂದ್ ಆಗಿವೆ. ಈ ವರ್ಷ ಕಡಿಮೆ ಸಂಖ್ಯೆಯ ಮಕ್ಕಳಿರುವ ಶಾಲೆ ಮುಚ್ಚಲು ತಯಾರಿ ನಡೆಸಲಾಗಿದೆ. ಹೀಗೆ ಮುಂದುವರೆದರೆ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾದರೂ ಅಚ್ಚರಿ ಇಲ್ಲ.