ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಮಹತ್ವದ ಯೋಜನೆಯಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರೂ.2000 ಹಣವನ್ನು ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಸರ್ಕಾರ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದೆ.
ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.
ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.2000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.