ಬೆಂಗಳೂರು: ಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಮುನಿಸಿಪಲ್ ಕಾಯ್ದೆಗಳ ತಿದ್ದುಪಡಿಯಂತೆ ಕರ್ನಾಟಕ ಪೌರಸಭೆಗಳ (ತೆರಿಗೆ) ನಿಯಮಗಳು 1995 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಶೆಡ್ಯೂಲ್ 3ರ ತೆರಿಗೆ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅದರಂತೆ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಇ-ಖಾತಾ ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ ಎಂದು ತಿಳಿಸಿದರು.
ಇ-ಆಸ್ತಿ ತಂತ್ರಂಶದಲ್ಲಿ ಖಾತಾ ಸೃಜನೆ ಮಾಡಲು ಅನುಸರಿಸಬೇಕಾದ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ದಾಖಲೆಗಳ ಕುರಿತು ವ್ಯವಸ್ಥತಿತ ಕಾರ್ಯಾಚರಣೆ ವಿಧಾನವನ್ನು ಪೌರಾಡಳಿತ ನಿರ್ದೇಶನಾಲಯದಿಂದ 2025ನೇ ಫೆಬ್ರವರಿ 17ರಂದು ಹೊರಡಿಸಲಾಗಿದೆ ಹಾಗೂ 2025ನೇ ಫೆಬ್ರವರಿ 11ರಿಂದ ಅನಧಿಕೃತ ಸ್ವತ್ತುಗಳಿಗೆ ಖಾತ ನೀಡಲು ಇ-ಆಸ್ತಿ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.