ಬೆಂಗಳೂರು : ರಾಜ್ಯ ಸರ್ಕಾರವು ಹೆಣ್ಣು ಮಕ್ಕಳ ಆರೋಗ್ಯಕ್ಕೆ ಮಹತ್ವದ ಕ್ರಮ ಕೈಗೋಂಡಿದ್ದು, ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ 14 ವರ್ಷದೊಳಗಿನ ಎಲ್ಲಾ ಬಾಲಕಿಯರಿಗೆ ಉಚಿತವಾಗಿ ಎಚ್‌ಪಿವಿ ಲಸಿಕೆ ನೀಡಲು ನಿರ್ಧರಿಸಿದೆ.
ಆರ್ಟಿಸ್ಟ್ ಫಾರ್ ಹರ್ ಸಂಸ್ಥೆ ಆಯೋಜಿಸಿದ್ದ ‘ಕರ್ನಾಟಕದಲ್ಲಿ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಾರಿಯ ಬಜೆಟ್‌ನಲ್ಲಿ ಉಚಿತ ಲಸಿಕೆ ನೀಡುವ ಬಗ್ಗೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕದ 5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಪ್ರಕಟಿಸಿ ಹಣ ತೆಗೆದಿಡಲಾಗಿದೆ. ಈ ಜಿಲ್ಲೆಗಳಲ್ಲಿ 14 ವರ್ಷ ಪೂರೈಸುವ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುವುದು. ಮುಂಬರುವ ದಿನಗಳಲ್ಲಿ ಈ ಲಸಿಕೆಯ ಬೆಲೆ ಕಡಿಮೆಯಾಗುವ ಸಾಧ್ಯತೆ ಇದ್ದು, ಎಲ್ಲಾ ಹೆಣ್ಣು ಮಕ್ಕಳಿಗೂ ಇದು ಲಭ್ಯವಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಮಹಿಳೆಯರಲ್ಲಿ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಎಚ್‌ಪಿವಿ ಲಸಿಕೆ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಸಹಕಾರಿಯಾಗಿದೆ. ಈ ಲಸಿಕೆಯನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ನವದೆಹಲಿ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲಾಗುತ್ತಿದ್ದು, ನಮ್ಮ ರಾಜ್ಯದಲ್ಲಿಯೂ ಈ ಲಸಿಕೆ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.
ಹದಿಹರೆಯದ ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಯಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಲಸಿಕೆ ನೀಡುವ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿರುವ 90-70-90 ಸೂತ್ರದಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಯೋಗಿಕ ಅನುಷ್ಠಾನ ನಡೆಯಲಿದೆ. ಈ ವಿಷಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಎಂದು ತಿಳಿಸಿದ್ದಾರೆ.