ಬೆಂಗಳೂರು : ಇತ್ತೀಚಿಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಆದರೆ ರಾಜ್ಯಪಾಲರು ಗ್ರೇಟರ್ ಬೆಂಗಳೂರು ಪ್ರಧಿಕಾರ ರಚನೆ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ. ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕ ಗಾಲಿ ಜನಾರ್ಧನ್ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ವಿಶೇಷ ತನಿಖಾ ತಂಡ (SIT) ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲು ಪ್ರತ್ಯೇಕವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
ಈ ಸಂಬಂಧ ಸಾವಿರಾರು ಪುಟಗಳ ಆರೋಪಪಟ್ಟಿಯನ್ನು ಕನ್ನಡದಿಂದ ಇಂಗ್ಲೀಷ್‌ಗೆ ಅನುವಾದಿಸಿ ರಾಜ್ಯಪಾಲರಿಗೆ ತನಿಖಾಧಿಕಾರಿಗಳು ಸಲ್ಲಿಸಿದ್ದರು. ಆದರೆ ಕೆಲ ತಾಂತ್ರಿಕ ಕಾರಣ ಮುಂದಿಟ್ಟು ಅವುಗಳಿಗೆ ಸ್ಪಷ್ಟನೆ ಕೋರಿ ಲೋಕಾಯುಕ್ತ ಪೊಲೀಸರು ಹಾಗೂ ಎಸ್‌ಐಟಿ ಅಧಿಕಾರಿಗಳಿಗೆ ರಾಜ್ಯಪಾಲರು ಆರೋಪ ಪಟ್ಟಿ ಮರಳಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದರೆ, ರೆಡ್ಡಿ ವಿರುದ್ಧ ಮರು ತನಿಖೆ ಕಾರಣದ ಬಗ್ಗೆ ವಿವರಣೆ ಕೋರಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ ವಿಧಾನಸಭಾ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿ 8 ವಿಧೇಯಕಗಳಿಗೆ ಅನುಮೋದನೆ ನೀಡದೆ ಸರ್ಕಾರಕ್ಕೆ ರಾಜ್ಯಪಾಲರು ಮರಳಿಸಿದ್ದಾರೆ.