ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ, ರಾಜ್ಯ ಸರ್ಕಾರದ ನಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ ನಡೆಸಿದ್ದಾರೆ.
ಇಂದು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದು, ಈ ವೇಳೆ ಫ್ರೀಡಂಪಾರ್ಕ್ ಬಳಿಯೇ ಬ್ಯಾರಿಕೇಟ್ ಅಳವಡಿಸಿ ಬಿಜೆಪಿ ನಾಯಕರನ್ನು ಪೊಲೀಸರು ತಡೆದಿದ್ದಾರೆ. ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.
ನಿನ್ನೆಯಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಗುರುವಾರ ಮಧ್ಯಾಹ್ನದವರೆಗೂ ಹೋರಾಟ ನಡೆಸಲಾಗುವುದು. ಇದೇ ತಿಂಗಳ 8ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.