ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಮಾನ್ಯ ಉಚ್ಛ ನ್ಯಾಯಾಲಯ, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಆದರೂ ಕೂಡ ಇತ್ತೀಚಿನ ದಿನಗಳಲ್ಲಿ ಉಲ್ಲಂಘನೆಗಳು ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
ನಗರದಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಸುತ್ತೋಲೆ ಹೊರಡಿಸಲಾಗುತ್ತಿದೆ. ಅದರಲ್ಲಿ, ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಗೆ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವ ಅಧಿಕಾರವನ್ನು ನೀಡಿ ಎಫ್.ಐ.ಆರ್ ದಾಖಲಿಸಿ, ತೆರವುಗೊಳಿಸುವ ವೇಳೆ ವ್ಯಯವಾಗುವ ವೆಚ್ಚವನ್ನು ವಸೂಲಿ ಮಾಡುವುದರ ಜೊತೆಗೆ ದುಪ್ಪಟ್ಟು ದಂಡ ವಿಧಿಸುವ ಜವಾಬ್ದಾರಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಮಳೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ:
ರಾಜಕಾಲುವೆಗಳಲ್ಲಿ ವಾರ್ಷಿಕ ನಿರ್ವಹಣೆ ಅಡಿ ಸ್ವಚ್ಛತೆ ಮಾಡುವ ಕಾರ್ಯವನ್ನು ಸಕ್ರಿಯವಾಗಿ ಮಾಡಿ ಹೂಳನ್ನು ತೆರವುಗೊಳಿಸಬೇಕು. ವಾರ್ಡ್ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಬರುವ ಸೈಡ್ ಡ್ರೈನ್ ಗಳನ್ನು ಶಿಲ್ಟ್ ಅಂಡ್ ಟ್ರ್ಯಾಕ್ಟರ್ ಗಳು ಬಳಸಿ ಹೂಳೆತ್ತುವ ಕೆಲಸ ಮಾಡಬೇಕು. ಮಳೆಗಾಲ ಪ್ರಾರಂಭಕ್ಕೂ ಮುಂಚಿತವಾಗಿ ಆದ್ಯತೆ ಮೇರೆಗೆ ಸ್ವಚ್ಛತಾ ಕಾರ್ಯ ನಡೆಸಿ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಲು ಸೂಚಿಸಿದರು.
ರಸ್ತೆ ಗುಂಡಿಗಳನ್ನು ಮುಚ್ಚಿ:
ಬಿಬಿಎಂಪಿ ವ್ಯಾಪ್ತಿ ರಸ್ತೆ ಗುಂಡಿಗಳನ್ನು ಕೂಡ ಮುಚ್ಚಬೇಕಿದ್ದು, ಆಯಾ ವಲಯಗಳಲ್ಲಿ ರಸ್ತೆಗುಂಡಿಗಳನ್ನು ಗುರುತಿಸಿ ಕೂಡಲೇ ಮುಚ್ಚುವ ಕಾರ್ಯ ಮಾಡಲು ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಸತೀಶ್, ರಮೇಶ್, ರಮ್ಯಾ, ಕರೀಗೌಡ, ದಿಗ್ವಿಜಯ್ ಬೋಡ್ಕೆ, ನವೀನ್ ಕುಮಾರ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಕೇಸ್: ಪ್ರಕರಣ ರದ್ದುಕೋರಿ ಅನುರಾಧ ಹೈಕೋರ್ಟ್ ಗೆ ಅರ್ಜಿ
ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್