ಶೃಂಗೇರಿ: ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಧುರೀಣ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ, ಸಚಿವ ಬೇಗಾನೆ ರಾಮಯ್ಯ ಅವರು ನಿಧನರಾಗಿದ್ದಾರೆ.
ಬೇಗಾನೆ ರಾಮಯ್ಯ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಇಂದು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಶಾಸಕ, ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಬೇಗಾನೆ ರಾಮಯ್ಯ ವಿಧಿವಶರಾಗಿದ್ದಾರೆ.
ಅಂದಹಾಗೇ ಬೇಗಾನೆ ರಾಮಯ್ಯ ಅವರು 1978ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆ ಬಳಿಕ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಂತ ಅವರು, 1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.
ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ
ಹಿರಿಯ ಕಾಂಗ್ರೆಸ್ ಧುರೀಣರಲ್ಲಿ ಒಬ್ಬರಾಗಿದ್ದ ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ,ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
1978 ರಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ರಾಮಯ್ಯ ಅವರು ಮುಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಸಹ ಗಮನಾರ್ಹ ಕೆಲಸ ಮಾಡಿದ್ದರು. ಪ್ರಸ್ತುತ ಅವರ ಪುತ್ರಿ ಡಾ.ಆರತಿ ಕೃಷ್ಣ ಅವರು ಅನಿವಾಸಿ ಭಾರತೀಯರ ಸಂಘದ ಅಧ್ಯಕ್ಷರಾಗಿದ್ದಾರೆ. ಅವರಿಗೂ ಅವರ ಕುಟುಂಬ ವರ್ಗಕ್ಕೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ