ರಾಯಚೂರು : ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಎಡದಂಡೆ ಉಪ ಕಾಲುವೆಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಜನರಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗಂಗಮ್ಮ (40) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಆರು ಜನರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ದಾಖಲಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.
ಘಟನೆ ತಿಳಿಯುತ್ತಲೇ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ರಾಯಚೂರಿಗೆ ಬಂದ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.