ಚಾಮರಾಜನಗರ : ಅದೊಂದು ಕಾಲವಿತ್ತು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ ಯಾವುದೇ ರಾಜಕಾರಣಿ ಅಧಿಕಾರ ಕಳೆದುಕೊಳ್ಳುತ್ತಿದ್ದರು ಎಂಬ ಮಾತಿತ್ತು. ಅದಕ್ಕೆ ಸಾಕಷ್ಟು ಉದಾಹರಣೆಗಳು ಕೂಡ ಇವೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ ಬಳಿಕ ನನ್ನ ಅಧಿಕಾರ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗುತ್ತಿದೆ. ನಾನು ಸಿಎಂ ಆದ ಮೇಲೆ 20ಕ್ಕೂ ಹೆಚ್ಚು ಸಲ ಚಾಮರಾಜನಗರಕ್ಕೆ ಬಂದಿದ್ದೇನೆ. ಇದರಿಂದ ನಮಗೆ ಅಧಿಕಾರ ಗಟ್ಟಿಯಾಗುತ್ತಿದೆ ಎಂದು ತಿಳಿಸಿದರು.
ED ದಾಳಿ ರಾಜಕೀಯ ಪ್ರೇರಿತ
ಮಾಜಿ ಸಂಸದ ಡಿಕೆ ಸುರೇಶ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಒತ್ತಡಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಬಿಜೆಪಿ ನಾಯಕರ ಮೇಲೆ ಏಕೆ ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿಲ್ಲ? ಬಿಜೆಪಿಯವರು ಏನು ಸಾಚಾಗಳ? ಎಂದು ಕಿಡಿ ಕಾರಿದರು.