ಉಡುಪಿ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಸಹ ಒಂದಾಗಿದೆ. ಇದೀಗ ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ರಾಜ್ಯದ ಯಜಮಾನೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಈ ಕುರಿತು ಸಿಹಿ ಸುದ್ದಿ ನೀಡಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಹಣ ಬಾಕಿ ಉಳಿದಿದೆ. ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.
ಬಾಕಿ ಇರುವ ಮೂರು ತಿಂಗಳ—ಜನವರಿ, ಫೆಬ್ರವರಿ ಮತ್ತು ಮಾರ್ಚ್—ಕಂತಿನ ಮೊತ್ತವನ್ನು ಮೇ ತಿಂಗಳಲ್ಲಿ ಹಂತಹಂತವಾಗಿ ಬಿಡುಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಕಂತುಗಳಿಗೆ ಹಣಕಾಸು ಇಲಾಖೆಯಿಂದ ಈಗಾಗಲೇ ಅನುಮೋದನೆ ಲಭಿಸಿದೆ. ಮೊದಲ ಕಂತು ಒಂದು ವಾರದಲ್ಲಿ, ಎರಡನೇ ಕಂತು ಮುಂದಿನ ವಾರದಲ್ಲಿ ಹಾಗೂ ಮೂರನೇ ಕಂತು ತಿಂಗಳ ಅಂತ್ಯದೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ’ ಎಂಬ ಭರವಸೆಯನ್ನು ನೀಡಿದ್ದಾರೆ.