ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಈ ಸಂಬಂಧ 2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದೆ. ಅದರಲ್ಲಿ 2025-26 ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.
2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,-
(1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ.
(2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.
(3) “ಚಲನವಲನ” ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.
ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.
(4) ‘ಗುಂಪು-‘ಎ’, ‘ಬಿ’, ‘ಸಿ’, ಮತ್ತು ‘ಡಿ’ ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು ಮತ್ತು ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ
3. ವರ್ಗಾವಣಾ ಪ್ರಕ್ರಿಯೆ:-
ವರ್ಗಾವಣೆ/ಚಲನವಲನಗಳನ್ನುಸಕ್ಷಮ ಪ್ರಾಧಿಕಾರವು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.
4. ವರ್ಗಾವಣೆಯ ಬಗ್ಗೆ ನಿರ್ಬಂಧಗಳು :
ಪುಸಕ್ತ 2025-26ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ದಿನಾಂಕ:15.05.2025 ರಿಂದ ದಿನಾಂಕ:14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು, ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.
5. ಸಕ್ಷಮ ಪ್ರಾಧಿಕಾರದ ಹಾಗೂ ನೌಕರನ ಜವಾಬ್ದಾರಿಗಳು:-
ಸಕ್ಷಮ ಪ್ರಾಧಿಕಾರವು ವರ್ಗಾವಣೆ | ಚಲನವಲನ ಮಾಡುವಾಗ ಈ ಕೆಳಗಿನ ಅಂಶಗಳನ್ನೂ ಸಹ ಖಚಿತಪಡಿಸಿಕೊಳ್ಳತಕ್ಕದ್ದು.
(1) ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ಥಳ ನಿಯುಕ್ತಿ ನೀಡತಕ್ಕದ್ದು. ಈ ರೀತಿ ಹಲವಾರು ಸರ್ಕಾರಿ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯುವುದರಿಂದ ಸರ್ಕಾರಕ್ಕೆ ಅನವಶ್ಯಕ ಆರ್ಥಿಕ ಹೊರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳತಕ್ಕದ್ದು.
(2) ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳ ಬಗ್ಗೆ ಆತನ ವಿರುದ್ಧ ಇಲಾಖಾ ವಿಚಾರಣೆ ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ (Administrative exigency) ಅನುಗುಣವಾದ ಕಾರ್ಯಕಾರಿಯೇತರ (Non- Executive) ಹುದ್ದೆಗಳಿಗೆ ನೇಮಿಸತಕ್ಕದ್ದು. ಮುಂದುವರೆದು, ಇಲಾಖಾ ವಿಚಾರಣೆ / ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು.
(3) ವರ್ಗಾವಣೆಗೊಂಡ ಸರ್ಕಾರಿ ನೌಕರನು ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ, ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ದೃಢೀಕರಣ ಪತ್ರದೊಂದಿಗೆ ರಜೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.
(4) ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.
6. ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿ ಸಕ್ಷಮ ಪ್ರಾಧಿಕಾರಗಳು ವರ್ಗಾವಣೆಗಳನ್ನು ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡತಕ್ಕದ್ದಲ್ಲ-
(1) ಒಬ್ಬ ಸರ್ಕಾರಿ ನೌಕರನನ್ನು ಸೇವೆಯಿಂದ ಅಮಾನತ್ತಿನಲ್ಲಿಡುವ ಬದಲು ವರ್ಗಾಯಿಸಲು/ ಚಲನವಲನಗೊಳಿಸಲು ಉದ್ದೇಶಿಸಿದಾಗ;
(2) ಹೊಸ ಕಛೇರಿ / ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ತಿ, ರಾಜೀನಾಮೆ, ಹಿಂಬಡ್ತಿ, ವಜಾಗೊಳಿಸುವುದರಿಂದ ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ತಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ಭವವಾದ ಹುದ್ದೆಗಳನ್ನು ತಕ್ಷಣ ತುಂಬಬೇಕಾದಾಗ;
(3) ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾವಣೆಯು ಅವಶ್ಯವೆನಿಸಿದಲ್ಲಿ ಇದಕ್ಕೆ ಕಾರಣಗಳನ್ನು ಲಿಖಿತ ಮೂಲಕ ದಾಖಲಿಸಿ ಇಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.
(4) ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸ್ವರೂಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪವಿದೆಯೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟಿ/ಚಾರ್ಜ್‌ಶೀಟ್ ಜಾರಿಯಾಗಿರುವುದು ಅಥವಾ ಸಕ್ಷಮ ನ್ಯಾಯಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ.
ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore