ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಎನ್ ಹೆಚ್ ಎಂ ಗುತ್ತಿಗೆ ನೌಕರರಾಗಿ ಸಾವಿರಾರು ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಎರಡು ತಿಂಗಳೇ ಕಳೆದರು ವೇತನ ಪಾವತಿಯನ್ನು ಸರ್ಕಾರ ಮಾಡಿಲ್ಲ. ಹೀಗಾಗಿ ಕೂಡಲೇ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘವು ಒತ್ತಾಯಿಸಿದೆ.
ಈ ಕುರಿತಂತೆ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಅವರು ಬರೆದಿರುವಂತ ಪತ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಅತ್ಯಂತ ಕಡಿಮೆ ವೇತನ ಇದ್ದು, ಮಾರ್ಚ್, ಎಪ್ರಿಲ್ 2025 ತಿಂಗಳ ವೇತನ ಪಾವತಿ ಆಗದೇ ಕಡಿಮೆ ವೇತನ ಪಡೆಯುತ್ತಿರುವ ಸಿಬ್ಬಂದಿಗಳ ಜೀವನ ನಿರ್ವಹಣೆ ಕಷ್ಟವಾಗಿದೆ. ಮಕ್ಕಳ ಶಾಲಾ ಫೀಸು ಪಾವತಿ, ಇ.ಎಮ್.ಐ ಹಾಗೂ ಮನೆ ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗಿದೆ. ಕಳೆದ ಎರಡು ತಿಂಗಳುಗಳಿಂದ ಬಾಡಿಗೆ ಪಾವತಿ ಮಾಡದೇ ಇರುವುದರಿಂದ ಮನೆ ಮಾಲೀಕರಿಂದ ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬುದಾಗಿ ನೌಕರರ ಅಳಲನ್ನು ಬಿಚ್ಚಿಟ್ಟಿದ್ದಾರೆ.
ಈ ಹಿನ್ನಲೆಯಲ್ಲಿ ಸಕಾಲದಲ್ಲಿ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ವೇತನ ಪಾವತಿ ಆಗುವಂತೆ ಜಿಲ್ಲೆಗಳಿಗೆ ಅನುದಾನ ಬಿಡುಗಡೆ ಮಾಡಲು ಹಾಗೂ ಬಾಕಿ ಇರುವ ಬೇಡಿಕೆಗಳಾದ 15% ವೇತನ ಹೆಚ್ಚಳದ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೇ ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಹಾಗೂ ಆರೋಗ್ಯ ವಿಮೆಯ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಒತ್ತಾಯಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore