ಬೆಂಗಳೂರು : ಬೆಂಗಳೂರು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಅಂತ ಪಕ್ಷದ ಮುಖಂಡರು ತೀರ್ಮಾನ ಮಾಡಿದ್ದಾರೆ. ಹಾಗಾಗಿ ಅವರ ಒತ್ತಡಕ್ಕೆ ಮಣಿದು ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಪಕ್ಷದ ಮುಖಂಡರಿಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕೆಲವು ವಿಚಾರದಲ್ಲಿ ಅವರ ಮಾತಿಗೂ ನಾವು ಗೌರವ ಕೊಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಮಾರ್ಗದರ್ಶನವನ್ನು ಕೊಟ್ಟಿದ್ದಾರೆ. ಅದರಂತೆ ಇವತ್ತು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ಮುಂದೆ ನೋಡೋಣ. ಪಕ್ಷದ ಮುಖಂಡರು, ಜಿಲ್ಲೆಯ ನಾಯಕರು ಅವರ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿ ಅವರ ಮಾತುಗಳಿಗೆ, ನಾಯಕರ ಸೂಚನೆಗೆ ತಲೆಬಾಗಬೇಕಾಗುತ್ತದೆ ಎಂದು ತಿಳಿಸಿದರು.
ನಿಖಿಲ್ ಕುಮಾರಸ್ವಾಮಿ ಕೂಡ ಅಭ್ಯರ್ಥಿ ಆಗ್ತಾರೆ ಎನ್ನುವ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿ, ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಅರ್ಜಿ ಸಲ್ಲಿಕೆ ಮಾಡೋದಕ್ಕೆ ಎಲ್ಲಾ ಕಾರ್ಯಕರ್ತರು ಮತ್ತು ನಿರ್ದೇಶಕರು, ಮಾಜಿ ನಿರ್ದೇಶಕರು, ಮಾಜಿ ಅಧ್ಯಕ್ಷರು ನಮ್ಮ ಜಿಲ್ಲೆಯ ಶಾಸಕರು ಸೇರಿ ಎಲ್ಲರೂ ಒತ್ತಡ ಹಾಕಿದ್ದಾರೆ ಎಂದು ಹೇಳಿದರು.