ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ.
- ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
- ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.
- ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
- ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
- ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
- ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.
- ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.
- ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.
- ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.
- ರಾಜ್ಯದಲ್ಲಿ ಕೊರೊನಾ ಹರಡದಂತೆ
ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
- ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
- ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು.
- ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ
ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.
- ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
- ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.
- ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
- ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.