ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ತೀವ್ರ ಕುಸಿದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ 2024-25ನೇ ಸಾಲಿನಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಸರ್ಕಾರಿ ಪ್ರೌಢಶಾಲೆ ಗಳಿಗೆ ನೋಟಿಸ್ ಜಾರಿಗೊಳಿಸಿ ಮುಖ್ಯ ಶಿಕ್ಷಕರ ವಿರುದ್ಧ ಶಿಸ್ತುಕ್ರಮಕ್ಕೆ ಸೂಚಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ಹೊರಡಿಸಿದ್ದು, ರಾಜ್ಯದ ಶಾಲೆಗಳಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ಕಲಿಕೆಯ ಮಟ್ಟ ಉನ್ನತಗೊಳಿಸಿ ಫಲಿತಾಂಶ ಹೆಚ್ಚಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಇಲಾಖೆನಿರ್ದೇಶನ ನೀಡಿತ್ತು. ಆ ನಿರ್ದೇಶನದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದಿರುವುದು ನಿಮ್ಮ ಶಾಲೆಯ ಫಲಿತಾಂಶದಿಂದ ಕಂಡುಬಂದಿದೆ. ನಿಮ್ಮ ಈ ಧೋರಣೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ತೋರಿಸುತ್ತಿದೆ.
ನೀವು ಶೈಕ್ಷಣಿಕವಾಗಿ ಶಾಲೆಗಳ ಶಿಕ್ಷಕರುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವಲ್ಲಿ ಸರಿಯಾದ ಮಾರ್ಗದರ್ಶನ ನೀಡದೇ ನಿರ್ಲಕ್ಷ್ಯ ತೋರಿರುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇವಾ ನಿಯಮಗಳು 1957 ರ ನಿಯಮ 12 ರಡಿ ನೋಟಿಸ್ ಜಾರಿಗೊಳಿಸಿದೆ.