ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಆರೆಂಜ್ ಅಲರ್ಟ್ ಹಾಗೂ ನಂತರದನಂತರದ ಎರಡು ದಿನಕ್ಕೆ ಯೆಲ್ಲೋ ಅಲರ್ಟ್ ನೀಡಲಾ ಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ಇಂದು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ರಜೆ ಘೋಷಿಸಲಾಗಿದೆ.
ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ದಾಂಡೇಲಿ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ದಾಂಡೇಲಿ ತಾಲೂಕಿನ ತಹಸೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಇದೀಗ ಭಾರಿ ಮಳೆ ಸುರಿಯುತ್ತಿದ್ದು, ಸಕಲೇಶಪುರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.