ಬೆಂಗಳೂರು : ರಾಜ್ಯದಲ್ಲಿ ಜುಲೈ 3 ರ ಬಳಿಕ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಜುಲೈ 3 ರ ಬಳಿಕ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 3ರ ಬಳಿಕ ಮಳೆಯ ಅಬ್ಬರ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಜುಲೈ 3ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯನಗರ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.