ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾಚಾರ, ಲಂಚಗುಳಿತನ ಹಾಗೂ ಆಡಳಿತ ವೈಫಲ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಟೀಕಾ ಪ್ರಹಾರ ಮಾಡುತ್ತಿದ್ದು, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು; ಅನುದಾನವಿಲ್ಲದೆ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಈ ಕಾರಣಕ್ಕೆ ಶಾಸಕರು ಬಂಡಾಯ ಎದ್ದಿದ್ದು, ಇದು ಸರ್ಕಾರದ ಅಧಃಪತನಕ್ಕೆ ಕಾರಣವಾಗಲಿದೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಶಾಸಕ ಟಿ.ಎನ್. ಜವರಾಯಿಗೌಡ ರವರು, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಪಕ್ಷದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಫ್ರೋಜ್ ಬೇಗ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್, ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ನಾಗೇಶ್ವರರಾವ್, ಬೆಂಗಳೂರು ನಗರ ಕಾರ್ಯಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ, ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ತಾರಾ ಲೋಕೇಶ್ ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.
GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ