ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವಲಯ ಅರಣ್ಯ ಅಧಿಕಾರಿ ಸಂತೋಷ್ ಪವಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವನ್ಯಜೀವಿ ವಲಯದ ಅಧಿಕಾರಿಗಳು, ಸಿಬ್ಬಂದಿಗಳು ಮಂಜುನಾಥ್ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಅಲ್ಲದೇ ಮಂಜುನಾಥ್ ನೀಡಿದ ದೂರಿನ ಆಧಾರದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣ ಸಂಬಂಧ ವಿದೇಶದಿಂದ ಹಿಂದಿರುಗಿದ ಸಾಗರ ಶಾಸಕ ಗೋಪಾಲಕೃಷ್ಣ ಕೃಷ್ಣ ಬೇಳೂರು ಅವರು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮಂಜುನಾಥ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ಆ ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಹಲ್ಲೆ ಆರೋಪದ ಸಂಬಂಧ ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ ಅರಣ್ಯಾಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದರು.
ಈ ಬೆನ್ನಲ್ಲೇ ಕಾರ್ಗಲ್ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಸಂತೋಷ್ ಎಂ ಪವಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅವರನ್ನು ಯಲ್ಲಾಪುರ ವಿಭಾಗದ ಕಿರವತ್ತಿಯ ಸರ್ಕಾರಿ ಮರಮುಟ್ಟು ಸಂಗ್ರಹಾಲಯದ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.