ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದುದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. 11 ರಿಂದ 20 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯ 6 ತಾಳೂಕಿನಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಜೋಯಿಡಾ, ಸಿದ್ದಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂರು ತಾಲೂಕುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇನ್ನೂ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎರಡು ತಾಲೂಕಿಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ ಎರಡೂ ತಾಲೂಕಿಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಸೀಲ್ದಾರ್ ಆದೇಶಿಸಿದ್ದಾರೆ.
ಇಂದು ದಿನಾಂಕ 4-7-25 ರಂದು ಸಾಗರ ತಾಲೂಕಿನಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರ,ಪ್ರಾಥಮಿಕ ಶಾಲೆ,ಪ್ರೌಢ ಶಾಲೆಗಳಿಗೆ ಅನ್ವಯಿಸಿ ಇಂದು ರಜೆಯನ್ನು ಘೋಷಿಸಲಾಗಿದೆ,ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಯಿಸಿ ಈ ರಜೆಯನ್ನು ಸರಿದೂಗಿಸಲು ಸೂಚಿಸಿದೆ