ಲೈನ್ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಬುಡಕಟ್ಟು ಸಮಾಜದವರು ಬಡವರಿದ್ದು, ಇವರಿಗೆ ನಿವೇಶನ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 1500 ಕ್ಕೂ ಹೆಚ್ಚು ನಿವೇಶನ ರಹಿತರಿದ್ದು, ನಿವೇಶನ ಹಕ್ಕುಪತ್ರ ನೀಡಲು ಮುಂದಾಗಲಾಗಿದೆ. ಈಗಾಗಲೇ ಸರ್ಕಾರಿ ಜಾಗ ಗುರುತಿಸಲಾಗಿದೆ ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ, ಪೊನ್ನಂಪೇಟೆ, ಮಡಿಕೇರಿ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಗುರುತಿಸಲಾಗಿದೆ. ಎರಡು ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗುವುದು. ನಿವೇಶನ ರಹಿತರು ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಕೋರಿದರು.
ಲೈನ್ಮನೆಗಳಲ್ಲಿ ವಾಸಿಸುವ ಬುಡಕಟ್ಟು ಸಮಾಜದವರಿಗೆ ವೈಜ್ಞಾನಿಕವಾಗಿ ಪಟ್ಟಿ ತಯಾರಿಸಲಾಗಿದೆ. 61 ಎಕರೆ ಜಾಗವಿದ್ದು, ಗ್ರಾಮ ಸಭೆಯಲ್ಲಿ ಸಹ ಪರಿಶೀಲಿಸಿ ಪಟ್ಟಿ ಆಯ್ಕೆ ಮಾಡಲಾಗುತ್ತದೆ. ಆಯಾಯ ಗ್ರಾ.ಪಂ.ಯಲ್ಲಿ ಕುಟುಂಬಗಳು ನೋಂದಣಿ ಮಾಡಿಕೊಳ್ಳಬೇಕು. ಇದೊಂದು ಅಭಿಯಾನ ಮಾದರಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದರು.
ಆರ್ಥಿಕವಾಗಿ ಬಡ ಕುಟುಂಬದವರಿಗೆ ನಿವೇಶನ ಒದಗಿಸಬೇಕು ಎಂಬುದು ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬುಡಕಟ್ಟು ಪರಿಶಿಷ್ಟರಿಗೆ ನಿವೇಶನ ನೀಡಲು ಮುಂದಾಗಲಾಗಿದೆ ಎಂದರು.
ಜಿಲ್ಲಾಧಿಕಾರಿಯವರು, ಜಿ.ಪಂ.ಸಿಇಒ ತಹಶೀಲ್ದಾರರು, ತಾ.ಪಂ.ಇಒ ಇವರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಬಡವರು ತಾವುಗಳೇ ಹೋಗಿ ಎಲ್ಲಿಯೂ ಸಹ ಶೆಡ್ ನಿರ್ಮಾಣ ಮಾಡಬಾರದು. ಜಾಗ ಗುರುತಿಸಿ ನಿವೇಶನ ಹಂಚಿಕೆ ಮಾಡಲಾಗುವುದು. ಆದ್ದರಿಂದ ತಾಳ್ಮೆಯಿಂದ ಇರಬೇಕು ಎಂದರು.
ಜಿಲ್ಲೆಯಲ್ಲಿ ವನ್ಯಪ್ರಾಣಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಹುಲಿ, ಕರಡಿ, ಕಾಡಾನೆ ವನ್ಯಪ್ರಾಣಿಗಳ ಹಾವಳಿ ತಡೆಯಲು ವಿಶೇಷ ಕ್ಷಿಪ್ತಪಡೆ ರಚಿಸಲಾಗಿದ್ದು, ಈ ತಂಡವು ಕಾಡಾನೆಗಳನ್ನು ಓಡಿಸುವ ಕೆಲಸ ಮಾಡಲಿದ್ದಾರೆ ಎಂದರು.
ಎಲ್ಲಾ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಗುರುವಾರ ದಿಂದ ಆರಂಭವಾಗಿದೆ. ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿರುವ ನಾಲ್ಕು ಹುಲಿಗಳನ್ನು ಹಿಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಪಿ.ಕೆ.ಪೊನ್ನಪ್ಪ ಇದ್ದರು.