ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲೆ ಅಧಿಕಾರಕ್ಕೆ ಬಂದ ಕೇವಲ 2 ವರ್ಷಗಳಲ್ಲಿ 1400 ರೂ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ಹೀಗಾಗಿ ತಾಲೂಕಿನ ಜನತೆಯ ಪರವಾಗಿ ಜು.28 ಸೋಮವಾರ ಸಾಧನ ಸಮಾವೇಶ ಹಮ್ಮಿಕೊಂಡಿದ್ದು, ಪಕ್ಷಾತೀತವಾಗಿ ಆಗಮಿಸಿ ಕಾರ್ಯಕ್ರಮವನ್ನು ನಿರೀಕ್ಷೆಗೂ ಮೀರಿ ಯಶಸ್ವಿಗೊಳಿಸಬೇಕೆಂದು ಶಾಸಕ ಕೆ.ಎಂ.ಉದಯ್ ಶನಿವಾರ ಮನವಿ ಮಾಡಿದರು.
ಮದ್ದೂರು ತಾಲೂಕಿನ ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಆಯೋಜಿಸುತ್ತಿರುವ ಬೃಹತ್ ವೇದಿಕೆಯನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಕಾರ್ಯಕ್ರಮದ ಅಂತಿಮ ಹಂತದ ಸಿದ್ದತಾ ಕಾರ್ಯಗಳನ್ನು ವೀಕ್ಷಿಸಿ ಬಳಿಕ ಸುದ್ದಿಗೊಷ್ಟಿ ನಡೆಸಿ ಮಾತನಾಡಿದರು.
ಸಾಧನ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸಚಿವರು, ನಿಗಮ, ಮಂಡಳಿ ಅಧ್ಯಕ್ಷರು ಹಾಗೂ ಜಿಲ್ಲೆಯ ಶಾಸಕರುಗಳು ಆಗಮಿಸಲಿದ್ದು, 1200 ಕೋಟಿ ರೂ ಮೊತ್ತದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂಬುವುದಕ್ಕೆ ಮದ್ದೂರು ವಿಧಾನಸಭಾ ಕ್ಷೇತ್ರದ ಸಾಧನ ಸಮಾವೇಶ ಸಾಕ್ಷಿಯಾಗಲಿದೆ. ಕ್ಷೇತ್ರದ ಜನರ ಬಹು ಬೇಡಿಕೆಗಳಾದ ನಾಲೆ ಮತ್ತು ಕೆರೆಗಳ ಅಭಿವೃದ್ಧಿಗೆ ಕಾವೇರಿ ನೀರಾವರಿ ನಿಗಮದ ವತಿಯಿಂದ 300 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಹೀಗಾಗಿ ರೈತಾಪಿ ವರ್ಗಕ್ಕೆ ನನ್ನ ಮೊದಲ ಆದ್ಯತೆ ನೀಡಲಾಗಿದೆ.
ಲೋಕೋಪಯೋಗಿ, ಇಂಧನ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ 1400 ರೂ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಹಲವು ಕಾಮಗಾರಿಗಳು ಉದ್ಘಾಟನೆಗೆ ಸಿದ್ದಗೊಂಡಿವೆ ಮತ್ತು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ 500 ಕ್ಕೂ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಯೊಬ್ಬರಿಗೂ ಯಾವುದೇ ಗೊಂದಲ ಸೃಷ್ಟಿಯಾಗದಂತೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ, 16 ಇಲಾಖೆಗಳಿಂದ ಒಟ್ಟು 87 ಕಾಮಗಾರಿಗಳ ಪೈಕಿ 60 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 27 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ. ಎಲ್ಲಾ ಕಾಮಗಾರಿಗಳ ಒಟ್ಟು ಮೊತ್ತ 1146.76 ಕೋಟಿಗಳಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಆಗಮಿಸುವ ವಾಹನಗಳನ್ನು ನಿಲುಗಡೆ ಮಾಡಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸೂಕ್ತ ಬಂದೋಬಸ್ತ್ ವ್ಯವಸ್ಥೆಗಾಗಿ ಒಬ್ಬ ಎಸ್ಪಿ ನೇತೃತ್ವದಲ್ಲಿ 1000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಕೊಂಡಿದ್ದು, ಯಾವುದೇ ರೀತಿಯ ಗೊಂದಲಗಳಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ ಕಾರ್ಯಕ್ರಮದ ದಿನದಂದು ಜೀತ ವಿಮುಕ್ತ 85 ಜನರಿಗೆ ನನ್ನ ಗುರುತು ಅಭಿಯಾನದಡಿ 14 ದಾಖಲೆಗಳನ್ನು ನೀಡಲಾಗುವುದು. ಸಾರಥಿ ಯೋಜನೆಯಡಿ ಇಬ್ಬರಿಗೆ ಕಾರ್ ಖರೀದಿಸಲು ಸಹಾಯಧನ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಯನ್ನು ತೆರೆಯಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಉಪ ವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ