ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿ RV ರೋಡ್ ಹಾಗು ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಕ್ಕೆ ಮೋದಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಇಂದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು. ಈ ಮಾರ್ಗವು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ ವರೆಗೆ ವಿಸ್ತರಿಸಿದೆ. ಹಳದಿ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. ಈ ಯೋಜನೆಯು 5,000 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಹಳದಿ ಮಾರ್ಗವು ಬೆಂಗಳೂರಿನ ದಕ್ಷಿಣ ಭಾಗದ ವಸತಿ ಪ್ರದೇಶಗಳನ್ನು ಐಟಿ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಸಂಪರ್ಕಿಸುತ್ತದೆ. ಆರಂಭದಲ್ಲಿ ಹಳದಿ ಮಾರ್ಗದಲ್ಲಿ ಮೂರು ರೈಲುಗಳು ಮಾತ್ರ ಸಂಚರಿಸಲಿವೆ. ರೈಲುಗಳು ಚಾಲಕ ರಹಿತವಾಗಿರಲಿವೆ. ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.
ಇದಕ್ಕೂ ಮೊದಲು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ನಂತರ ರಸ್ತೆ ಮಾರ್ಗವಾಗಿ 11:15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತೆರಳಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರು -ಬೆಳಗಾವಿ, ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಇದೇ ವೇಳೆ ಚಾಲನೆ ನೀಡಿದರು.