ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಇಂದು ಕೊಡಗು ಜಿಲ್ಲೆಯಾಧ್ಯಂತ ಆರೆಂಜ್ ಅಲರ್ಟ್ ನೀಡಲಾಗಿದೆ. ಜೋರು ಗಾಳಿ ಮಳೆಯ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯ 2 ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲ್ಲೂಕಿನ ಅಂಗನವಾಡಿಗಳು, ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ. ಆಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮಾತ್ರ ಇಂದು ರಜೆಯನ್ನು ಘೋಷಿಸಿ ಡಿಸಿ ಲತಾ ಕುಮಾರಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ ತಾಲ್ಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಡಗೋಡು, ಹಳಿಯಾಲ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ ಇಲ್ಲ ಅಂತ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶದಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ
ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುತ್ತಿದೆ. ಇಂದು ಕೂಡ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೊತೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶದಲ್ಲಿ ತಿಳಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಿದ್ದಾರೆ.
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆಯನ್ನು ನೀಡಲಾಗಿದೆ.
ಚಿಕ್ಕಮಗಳೂರು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲೂಕುಗಳಲ್ಲಿ, ಚಿಕ್ಕಮಗಳೂರು ತಾಲೂಕಿನ ಆವತಿ, ಜಾಗರ, ಖಾಂಡ್ಯ, ಆಲ್ದೂರು ಹೋಬಳಿ ತೀವ್ರವಾಗಿ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಆಗಸ್ಟ್ 18ರಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷ್ಠಿಸಲಾಗಿದ್ದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.