ಬೆಂಗಳೂರು : ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ಯಾದಗಿರಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಶಾಲೆ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆ
ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಆಗಸ್ಟ್ 20, 2025ರ ಬುಧವಾರದಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿವೆ.
ಈ ನಡುವೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ, ಇಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲೆ
ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಧಾರವಾಡ ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ನೀಡಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶಿಸಿದ್ದಾರೆ. ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾವೇರಿ
ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ, ಶೀತಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಸಿದ್ದಾಪುರ, ಯಲ್ಲಾಪುರ, ಮುಂಡಗೋಡು, ದಾಂಡೇಲಿ, ಜೋಯಿಡಾ, ಶಿರಸಿ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ.