ಚಿಕ್ಕಮಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಮೇಲೆ ಬಿದ್ದಿದೆ. ಹೀಗಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರ ಮುಂದುವರೆದಿದೆ. ಇದರಿಂದ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆಗಸ್ಟ್ 30) ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮುಂದುರಿದೆ. ಹೀಗಾಗಿ ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಈ ವಾರ ಹಲವು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದ್ರೆ, ನಾಳೆ ಮಾತ್ರ ಹೊನ್ನಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಅದೇ ರೀತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವರುಣ ಅಬ್ಬರ ಜೋರಾಗಿರುವುದರಿಂದ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನಲೆ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.