ಯಾದಗಿರಿ : ಇಲ್ಲಿನ ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 27ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಾಂಶುಪಾಲ ಸೇರಿದಂತೆ ನಾಲ್ವರನ್ನು ಸಸ್ಪೆಂಡ್ ಮಾಡಲಾಗಿದೆ.
ಹೌದು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆರೋಗ್ಯ ಸ್ಥಿತಿಗತಿಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಾಂಶುಪಾಲರು ಮತ್ತು ಹಾಸ್ಟೆಲ್ ವಾರ್ಡನ್ ಸೇರಿದಂತೆ ಶಾಲೆಯ ನಾಲ್ವರು ಉದ್ಯೋಗಿಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಅಮಾನತುಗೊಳಿಸಿದೆ.
ಪ್ರಕರಣ ಹಿನ್ನೆಲೆ?
ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ ಬಂದಿದೆ.
ಆರಂಭದಲ್ಲಿ, ಸಾಕಷ್ಟು ಒತ್ತಡದಲ್ಲಿದ್ದೇನೆ ಎಂದು ಹೇಳಿದ್ದ ಬಾಲಕಿ ಘಟನೆಯ ವಿವರ ಅಥವಾ ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಯ ಹೆಸರು ಬಹಿರಂಗಪಡಿಸಲು ನಿರಾಕರಿಸಿದ್ದಳು. ಶೌಚಾಲಯದಲ್ಲಿದ್ದಾಗ ಹೊಟ್ಟೆ ನೋವು ಕಾಣಿಸಿಕೊಂಡು ಅಲ್ಲಿ ಮಗುವಿಗೆ ಜನ್ಮ ನೀಡಿರುವುದಾಗಿ ಮಾತ್ರ ಅಧಿಕಾರಿಗಳಿಗೆ ತಿಳಿಸಿದ್ದಳು.
ತನಿಖೆಯ ಸಮಯದಲ್ಲಿ ಪೊಲೀಸರು ಆರೋಪಿಯನ್ನು 28 ವರ್ಷದ ವ್ಯಕ್ತಿ ಎಂದು ಗುರುತಿಸಿದ್ದಾರೆ. ಬಾಲಕಿ ಚೇತರಿಸಿಕೊಂಡು ವೈದ್ಯರು ಆರೋಗ್ಯವಾಗಿದ್ದಾಳೆಂದು ಘೋಷಿಸಿದ ನಂತರ ಏನಾಯಿತು ಮತ್ತು ಆಕೆಗೆ ಆರೋಪಿಯ ಪರಿಚಯವಿದೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳಲು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.