ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ನಮ್ಮ ಸರ್ಕಾರ 18000 ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ” ಮತ್ತು “ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ”ವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಳಿಕ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕೆಪಿಎಸ್ ಶಾಲೆಗಳ ಸಂಖ್ಯೆಯನ್ನು 800 ಕ್ಕೆ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಶಾಲೆಗಳ ಸಂಖ್ಯೆಯನ್ನು 1 ಸಾವಿರದಿಂದ 4ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಶಾಲಾ ಮಕ್ಕಳಿಗೆ ವಾರದ ಎಲ್ಲಾ ದಿನಗಳಂದು ಮೊಟ್ಟೆ ನೀಡಲಾಗುತ್ತಿದೆ. 50 ಪಿಯು ಕಾಲೇಜು, ಪ್ರೌಢಶಾಲೆಗಳಿಗೆ ಅನುಮೋದನೆ ನೀಡಲಾಗಿದ್ದು, ಅಡುಗೆ ಸಿಬ್ಬಂದಿ ಗೌರವಧನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿರುವ “ರಾಜ್ಯ ಪ್ರಶಸ್ತಿ ಪುರಸ್ಕೃರಿಗೆ, ಮಲೆನಾಡ ಗಾಂಧಿ ಮಾಜಿ ಶಿಕ್ಷಣ ಸಚಿವ ಹೆಚ್.ಜಿ ಗೋವಿಂದೇಗೌಡ ಪ್ರಶಸ್ತಿ ಪುರಸ್ಕೃತ ಶಾಲೆಗಳಿಗೆ ಹಾಗೂ ನ್ಯಾಕ್(NAAC) ಮಾನ್ಯತೆ ಪಡೆದ ಕಾಲೇಜುಗಳಿಗೆ ಅಭಿನಂದನಾ ಪತ್ರ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಡಾ.ಎಂ.ಸಿ ಸುಧಾಕರ್, ವಿಧಾನಪರಿಷತ್ ಸದಸ್ಯರಾದ ಶ್ರೀ ಪುಟ್ಟಣ್ಣ, ಶ್ರೀ ಡಿ.ಟಿ ಶ್ರೀನಿವಾಸ್, ಶ್ರೀ ರಾಮೋಜಿಗೌಡ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ, ಪದವಿಪೂರ್ವ ನಿರ್ದೇಶಕರಾದ ಶ್ರೀ ಭರತ್ ಎಸ್, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀಮತಿ ವಿದ್ಯಾ ಕುಮಾರಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಾದ ಮಂಜುಶ್ರೀ ಎನ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಹಾಜರಿದ್ದರು.