ಬೆಂಗಳೂರು : ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪದಡಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ಗೆ 2 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು.
ಮಂಗಳವಾರ ಶಾಂತಿ ನಗರದ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದ್ದ ಸತೀಶ್ ಸೈಲ್ ಅವರನ್ನು ಅಧಿಕಾರಿಗಳು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಬಳಿಕ ಅವರನ್ನು ಬಂಧನ ಮಾಡಲಾಗಿದೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ, 2 ದಿನಗಳ ಕಾಲ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.