ಹಾಸನ: ಶುಕ್ರವಾರ ರಾತ್ರಿ ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಒಂದು ಜನರ ಮೇಲೆ ನುಗ್ಗಿದ ಪರಿಣಾಮವಾಗಿ 8 ಜನರು ಸ್ಥಳದಲ್ಲೇ ಸಾವನ್ನಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಟ್ರಕ್ ಹರಿದು 8 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 18 ಜನರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ 7 ಜನರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕೆಳಗಿದೆ ಘೋರ ಘಟನೆಯ ವೀಡಿಯೋ ನೋಡಿ
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಂತಾಪ
ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.








