ಹಾಸನ: ಶುಕ್ರವಾರ ರಾತ್ರಿ ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಒಂದು ಜನರ ಮೇಲೆ ನುಗ್ಗಿದ ಪರಿಣಾಮವಾಗಿ 8 ಜನರು ಸ್ಥಳದಲ್ಲೇ ಸಾವನ್ನಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಟ್ರಕ್ ಹರಿದು 8 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 26 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 18 ಜನರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ 7 ಜನರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಈ ಘಟನೆಯ ಬೆಚ್ಚಿ ಬೀಳಿಸೋ ವೀಡಿಯೋ ಕೆಳಗಿದೆ ನೋಡಿ
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.