ಹಾವೇರಿ : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಒಪಿಎಸ್ ಜಾರಿ ಕುರಿತು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ಮುಂದಿನ ದಿನಗಳಲ್ಲಿ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ರಾಣೆಬೆನ್ನೂರಿನಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಮುಂದಿನ ದಿನಗಳಲ್ಲಿ ಒಪಿಎಸ್ ಜಾರಿ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯಡಿ ರಾಜ್ಯಾದ್ಯಂತ 1.16 ಕೋಟಿ ಮಕ್ಕಳು ಅಧ್ಯಯನ ನಡೆಸುತ್ತಿದ್ದು, 56 ಸಾವಿರ ಸರ್ಕಾರಿ ಶಾಲಾ, ಕಾಲೇಜುಗಳಿವೆ. ಶಿಕ್ಷಣ ಇಲಾಖೆ ನಿರ್ವಹಣೆ ತುಂಬಾ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವೆಬ್ ಕ್ಯಾಸ್ಟಿಂಗ್ ಜಾರಿಗೆ ತರಲಾಯಿತು ಎಂದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿರುವ ಖಾಲಿ ಹುದ್ದೆ ಭತಿರ್ಗೆ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿಯೇ ಖಾಲಿಯಿರುವ ಹುದ್ದೆಗಳನ್ನು ನೇಮಕ ಮಾಡುವುದಾಗಿ ತಿಳಿಸಿದ್ದಾರೆ. ಸರ್ಕಾರ ಕಾಲ್ಪನಿಕ ವೇತನ ನೀಡುವುದು, ಜ್ಯೋತಿ ಸಂಜೀವಿನಿ ಜಾರಿಗೊಳಿಸುವುದು ಸೇರಿ ಅನುದಾನಿತ ಶಿಕ್ಷಕರ ಬೇಡಿಕೆ ಈಡೇರಿಸಲು ಬದ್ಧವಿದೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ ಜಾರಿಗೊಳಿಸುವ ಭರವಸೆ ನೀಡಿದ್ದಾರೆ.
ಬಳಿಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾಥಿರ್ಗಳಿಗೆ ಅಭಿನಂದಿಸಿ, ಗೌರವಿಸಲಾಯಿತು. ರಾಜ್ಯಾಧ್ಯಕ್ಷ ಶ್ರೀ ಎನ್. ಗೋಪಾಲರಾವ್, ಪ್ರಧಾನ ಕಾರ್ಯದರ್ಶಿ ಶ್ರೀ ಎಂ.ಕೆ. ರಾಜು, ಸಂಘದ ಜಿಲ್ಲಾಧ್ಯಕ್ಷ ಶ್ರೀ ನಾಗರಾಜ ನಲವಾಗಲ, ಡಿಡಿಪಿಐ ಶ್ರೀ ಮೋಹನ್ ದಂಡಿನ, ಬಿಇಒ ಶ್ರೀ ಶ್ಯಾಮಸುಂದರ ಅಡಿಗ, ಮತ್ತಿತರರು ಉಪಸ್ಥಿತರಿದ್ದರು.