ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬಿಜೆಪಿ ಮುಖಂಡ ದಿನೇಶ್ ಹೊಸೂರು ಎಂಬುವರು ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಶಾಸಕ ರಾಜೇಗೌಡ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವಿಚಾರಣೆ ನಡೆಸಿದ ಕೋರ್ಟ್ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಆದೇಶ ಹೊರಡಿಸಿದೆ.
ಶಾಸಕರ ಪತ್ನಿ ಹಾಗೂ ಮಗನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆಗೆ ಆದೇಶ ನೀಡಿದೆ. 2 ತಿಂಗಳ ಒಳಗೆ ತನಿಖಾ ವರದಿ ಸಲ್ಲಿಸಲು ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ.
124 ಕೋಟಿ ಬೆಲೆ ಬಾಳುವ ಭೂಮಿಯನ್ನು ಕಡಿಮೆ ಬೆಲೆಗೆ ಅಕ್ರಮವಾಗಿ ಖರೀದಿಸಿದ ಆರೋಪವನ್ನು ಟಿ.ಡಿ.ರಾಜೇಗೌಡ ಹಾಗೂ ಅವರ ಕುಟುಂಬ ಎದುರಿಸುತ್ತಿದೆ. ಶಾಸಕ, ಅವರ ಪತ್ನಿ ಪುಷ್ಪಾ ರಾಜೇಗೌಡ ಹಾಗೂ ಪುತ್ರ ರಾಜ್‌ದೇವ್ ರಾಜೇಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಅನುಮತಿ ನೀಡಿದೆ.