ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸದಂತೆ ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮೀಕ್ಷೆ ಮಾಡಲು ವಿವಿಧ ಇಲಾಖೆಗಳಿಂದ ನಿಯೋಜಿಸಲ್ಪಟ್ಟ ಗಣತಿದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ತರಬೇತಿ ನೀಡಿ ತ್ವರಿತವಾಗಿ ಸಮೀಕ್ಷಾ ಕಾರ್ಯ ಆರಂಭಿಸಲು ಸೂಚನೆ ನೀಡಿದರು.
ನಗರದಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಸಮೀಕ್ಷಾ ಕಾರ್ಯವನ್ನು ನಡೆಸಬೇಕು. ಜೊತೆಗೆ ಆಶಾ ಕಾರ್ಯಕರ್ತೆಯರನ್ನು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಈ ಸಂಬಂಧ ಆಶಾ ಕಾರ್ಯಕರ್ತೆಯರಿಗೆ ನುರಿತ ತರಬೇತಿದಾರರಿಂದ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ನಗರ ಪಾಲಿಕೆಗಳ ಆಯುಕ್ತರು ತರಬೇತಿ ನಡೆಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾದವರಿಗೆ ಸಮೀಕ್ಷಾ ಅಧಿನಿಯಮದ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜಿಬಿಎ ಐದೂ ನಗರ ಪಾಲಿಕೆಗಳಲ್ಲಿ ಸಮೀಕ್ಷಾ ಕಾರ್ಯವು ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ನಡೆಸಬೇಕು. ಅದಕ್ಕೆ ಬೇಕಾದಂತಹ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜಿಬಿಎ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದೆಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾದ ತುಳಸಿ ಮದ್ದಿನೇನಿ ರವರು ಮಾತನಾಡಿ, ನಗರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಮೀಕ್ಷೆಗಾಗಿ ಜಿಪಿಎಸ್ ಆಧಾರಿತ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಮನೆ-ಮನೆಗೆ ಅಟಿಂಸುವ ಸ್ಟಿಕ್ಕರ್ ನಲ್ಲಿ ಯುಹೆಚ್ಐಡಿ ಸಂಖ್ಯೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಬಿಎ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಮಾತನಾಡಿ, ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿಕೊಳ್ಳಲಾಗಿದೆ. ಹೆಚ್ಚು ಗಣತಿದಾರರನ್ನು ನಿಯೋಜಿಸಿಕೊಂಡು, ವಾರ್ಡ್ ಮಟ್ಟದಲ್ಲಿ ಸರಿಯಾದ ಯೋಜನೆ ರೂಪಿಸಿ ಸಮೀಕ್ಷೆಯನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸಮೀಕ್ಷಾ ಕಾರ್ಯ ನಡೆಸುವುದನ್ನು ಅಧಿಕಾರಿಗಳು ರ್ಯಾಂಡಮ್ ಚೆಕ್ಕಿಂಗ್ ಮಾಡಲು ಸೂಚನೆ ನೀಡಿದರು.
ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯ ಆರಂಭ:
ನಗರದಲ್ಲಿ ನಿಖರವಾಗಿ ಸಮೀಕ್ಷೆ ನಡೆಸುವ ಸಲುವಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ಜಿಪಿಎಸ್ ಸಹಿತ Unique Household (UHID) ಸ್ಟಿಕ್ಕರ್ ಅನ್ನು ಪ್ರತಿ ಮನೆಯ ಮುಂಬಾಗಿಲಿಗೆ ಅಂಟಿಸುವ ಕಾರ್ಯ ಆರಂಭಿಸಲಾಗಿದೆ.
ಈ ವೇಳೆ ಜಿಬಿಎ ಮುಖ್ಯ ಆಯುಕ್ತರ ವಿಶೇಷ ಕರ್ತವ್ಯಾಧಿಕಾರಿ ಸೆಲ್ವಮಣಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ), ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ದಯಾನಂದ್, ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ರಮೇಶ್ ಡಿ.ಎಸ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್, ಡಾ. ರಾಜೇಂದ್ರ ಕೆ.ವಿ, ಎಲ್ಲಾ ಅಪರ ಆಯುಕ್ತರು, ಜಂಟಿ ಆಯುಕ್ತರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
GOOD NEWS: ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್