ಬೆಂಗಳೂರು: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಳೆಯಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ಕ್ಕೆ ನಾಗರಿಕರು ಸಹಕರಿಸುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ.
ಸಮೀಕ್ಷೆದಾರರಿಗೆ 29-09-2025 ಮತ್ತು 03-10-2025ರಂದು ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಸುಗಮವಾಗಿ ನಡೆಯಲು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 2 ವಲಯಗಳಲ್ಲಿನ ವಿಧಾನಸಭಾ ಕ್ಷೇತ್ರಗಳ 64 ವಾರ್ಡ್‌ಗಳ ಒಟ್ಟು 14.65 ಲಕ್ಷ ಮನೆಗಳು ಈ ಸಮೀಕ್ಷೆಗೆ ಒಳಪಡಲಿವೆ ಎಂದಿದ್ದಾರೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ವಿಧಾನಸಭಾ ಕ್ಷೇತ್ರಗಳಾದ ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ (ಭಾಗಶಃ), ರಾಜರಾಜೇಶ್ವರಿ ನಗರ, ಯಶವಂತಪುರ ಹಾಗೂ ದಾಸರಹಳ್ಳಿ (ಭಾಗಶಃ) ಸೇರಿವೆ.
ಹಿಂದುಳಿದ ವರ್ಗಗಳ ಆಯೋಗ ಮತ್ತು ಸರ್ಕಾರದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ನಡೆಸಲು ಎಲ್ಲಾ ಪೂರ್ವ ತಯಾರಿಗಳನ್ನು ಮಾಡಲಾಗಿದೆ. ಸಮೀಕ್ಷೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು/ನೌಕರರನ್ನು ನಿಯೋಜಿಸಲಾಗಿದ್ದು, ಅವರಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ರವರು ತಿಳಿಸಿದರು.
ನಾಗರಿಕರಲ್ಲಿ ವಿನಂತಿ:
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಮೀಕ್ಷೆಯಲ್ಲಿ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.