ಬೆಂಗಳೂರು : ಇತ್ತೀಚಿಗೆ ಸುಪ್ರೀಂಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಹಿರಿಯವಕೀಲ ರಾಕೇಶ್ ಕಿಶೋರ್ ಶೂ ಎಸೆದಿದ್ದ ಪ್ರಕರಣ ಭಾರಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ, ಬಿ.ಆರ್.ಗವಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ ಐದು ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹೌದು ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್ ಎಂ.ಸಿ ಮಂಜು ಹೆಸರಿನ ಖಾತೆಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ 67, 66 ಹಾಗೂ 66(C), ಭಾರತೀಯ ನ್ಯಾಯ ಸಂಹಿತೆ 352ರಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇತ್ತೀಚಿನ ಪ್ರಕರಣವೊಂದರ ಕುರಿತು ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂಥಹ ಕಾಮೆಂಟ್ ಪ್ರಕಟಿಸಿದ್ದರು. ಇದನ್ನು ಗಮನಿಸಿದ್ದ ಸೈಬರ್ ಕ್ರೈಮ್‌ನ ಸಾಮಾಜಿಕ ಜಾಲತಾಣ ವಿಭಾಗದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.