ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅ. 27ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ.26ರಂದು ಕರಾವಳಿ ಮತ್ತು ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.25 ಮತ್ತು 26ರಂದು ಗುಡುಗು ಸಿಡಿಲಿನೊಂದಿಗೆ ಭಾರೀ ಗಾಳಿ ಸಮೇತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.








