ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಗುರುವಾರದವರೆಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೇ, ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಜಾರಿ ನಿರ್ದೇಶನಾಲಯ ಸೂಚಿಸಬೇಕು ಎಂದು ಪೀಠ ಇದೇ ವೇಳೆ ತಿಳಿಸಿದೆ.
ಸತೀಶ್ ಸೈಲ್‌ಗೆ ಮಂಜೂರು ಮಾಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ, ಸೈಲ್ ಅವರ ಆರೋಗ್ಯ ಪರಿಸ್ಥತಿಗೆ ಸಂಬಂಧಿಸಿದ ದಾಖಲೆಯನ್ನು ಪರಿಶೀಲಿಸಿ ಅದನ್ನು ಖಾತರಿಪಡಿಸಲು ಯಾವ ವೈದ್ಯರನ್ನು ನೇಮಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲಹೆ ನೀಡಬೇಕು ಎಂದು ಇದೇ ವೇಳೆ ಪೀಠ ಹೇಳಿದೆ.
ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರು ಮಾಡಿದ್ದನ್ನು ರದ್ದುಪಡಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಶ್ನಿಸಿ ಸತೀಶ್ ಸೈಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.
ಸತೀಶ್ ಸೈಲ್ ಅವರು ಅನಾರೋಗ್ಯ ಪೀಡತರಾಗಿದ್ದರೆ, ಅವರು ಅನಾರೋಗ್ಯಪೀಡಿತರಾಗಿರಬೇಕು. ಅದರಲ್ಲಿ ಎರಡು ಮಾತಿಲ್ಲ. ವೈದ್ಯಕೀಯ ದಾಖಲೆಯನ್ನು ಖಾತರಿಪಡಿಸಬೇಕು. ಈ ವಿಚಾರದ ಕುರಿತು ಯೋಚಿಸಿ, ತಿಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿತು.








