ಉತ್ತರಕನ್ನಡ : ಜಿಲ್ಲೆಯ ದಾಂಡೇಲಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಕಳೆದ ನಾಲ್ಕು ದಿನಗಳಲ್ಲಿ ಹತ್ತಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ತಾಲೂಕು ವೈದ್ಯಾಧಿಕಾರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿದ್ದು ನಿನ್ನೆ ಒಂದೇ ದಿನ 5 ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.
ವೈಷ್ಣವಿ (14) ಹಜರತ್ (8) ರೋಜಿ (70) ಪೆಟ್ರಿನ (60) ಹಾಗೂ ನಾಗಮ್ಮ (5) ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಮನೆಗೆ ಹೋಗುತ್ತಿದ್ದ ದಾಂಡೇಲಿಯ ತಾಲೂಕು ವೈದ್ಯಾಧಿಕಾರಿ ಮೇಲು ಕೂಡ ಬೀದಿ ನಾಯಿಗಳು ದಾಳಿ ಮಾಡಿವೆ. ಸದ್ಯ ವೈದ್ಯಾಧಿಕಾರಿ ಅನಿಲ್ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಂಡೇಲಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಬೀದಿ ನಾಯಿಗಳು ಇವೆ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಕೂಡ ನಗರಸಭೆ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ದಾಂಡೇಲಿ ನಗರಸಭೆ ಅಧಿಕಾರಿಗಳ ವಿರುದ್ಧ ಸದ್ಯ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.








