ನವದೆಹಲಿ : ರಾಜ್ಯ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆ ಆರಂಭಿಸಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ವಿಚಾರ ಪ್ರಸ್ತಾಪಿಸಿದಾಗ ತಾತ್ವಿಕ ಒಪ್ಪಿಗೆ ದೊರಕಿದೆ.
ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿ ಮಾಡಿ ಸಂಪುಟ ಪುನಾರಚನೆ ವಿಚಾರ ಪ್ರಸ್ತಾಪಿಸಿದಾಗ ಈ ತಾತ್ವಿಕ ಒಪ್ಪಿಗೆ ದೊರಕಿದೆ. ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ನವೆಂಬರ್ 21ಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಮಾಡಲು ಅವಕಾಶ ನೀಡಬೇಕು ಎಂಬ ಸಿದ್ದರಾಮಯ್ಯ ಅವರ ಪ್ರಸ್ತಾಪಕ್ಕೆ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಮಾಲೋಚನೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ನಡೆದ ಮಾತುಕತೆಯಲ್ಲಿ ಬಹುಪಾಲು ಚರ್ಚೆ ಬಿಹಾರ ಚುನಾವಣೆ ಫಲಿತಾಂಶ ಕುರಿತು ನಡೆದಿದೆ ಎನ್ನಲಾಗಿದೆ. ಈ ಚರ್ಚೆಯ ನಂತರ ರಾಹುಲ್ ಹಾಗೂ ಸಿದ್ದರಾಮಯ್ಯ ಅವರು ಕೆಲವೊತ್ತು ಪ್ರತ್ಯೇಕವಾಗಿ ನೇರಾನೇರ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಸಂಪುಟ ಪುನಾರಚನೆ ವಿಚಾರ ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ರಾಹುಲ್ ಗಾಂಧಿ ತಾತ್ವಿಕ ಒಪ್ಪಿಗೆ ನೀಡುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ.








