ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದರೆ ಇತ್ತ ಜನರು ಮೋದಿಗೆ ಹೂ ಮಳೆ ಸುರಿಸುತ್ತಿದ್ದಾರೆ. ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ನೆರೆದಿದ್ದಾರೆ.
ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ್ದು, ಉಡುಪಿ ಹೆಲಿಪ್ಯಾಡ್ ನಿಂದ 20 ನಿಮಿಷಗಳ ರೋಡ್ ಶೋ ಮೂಲಕ ಶ್ರೀಕೃಷ್ಣ ಮಠಕ್ಕೆ ಹೊರಟಿದ್ದಾರೆ. ಬಳಿಕ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸಲಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ.
ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.








