ಬೆಂಗಳೂರು: ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಆ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉಪಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗಿದೆ. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನೆಲ್ಲಾ ನೀಡಲಾಗುತ್ತಿದೆ. ಗ್ರಾಮ ಪಂಚಾಯತಿಗಳಿಗೆ ಇದು ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಹಾಗೂ 199ಸಿ ಸೇರಿಸಲಾಗಿರುತ್ತದೆ. ತಿದ್ದುಪಡಿಯನ್ನು ದಿನಾಂಕ: 07.04.2025 ರಂದು ಅಧಿಸೂಚಿಸಲಾಗಿರುತ್ತದೆ.
ಅದರನ್ವಯ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು- 2025ನ್ನು ರೂಪಿಸಲಾಗಿದೆ. ಈ ನಿಯಮಗಳು ದಿನಾಂಕ:17.10.2025ರಿಂದ ಜಾರಿಗೆ ಬಂದಿರುತ್ತವೆ. ನಿಯಮಗಳಲ್ಲಿ ಹೊಸ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಅನುಸರಿಸಬೇಕಾದ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳು ವಸೂಲಾತಿ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಲಾಗಿದೆ. ಜೊತೆಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ಅನುಮೋದನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಹೇಳಲಾಗಿದೆ. ಪ್ರತಿಯೊಂದು ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಅಧಿಕಾರಿಗಳ ಜವಾಬ್ದಾರಿಗಳು, ಜಾರಿಗೆ ಕಾಲಾವಧಿ, ಅಪೀಲುಹೀಗೆ ಪ್ರತಿಯೊಂದು ವಿಷಯದಲ್ಲಿಯೂ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವಿವರಿಸಲಾಗಿದೆ.
ನೂತನ ನಿಯಮಗಳ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ತರಬೇತಿಯನ್ನು ನೀಡಲಾಗಿದೆ. ನಿಯಮಗಳ ಜಾರಿಗೆ ಪೂರಕವಾಗಿ ಪಂಚತಂತ್ರ ತಂತ್ರಾಂಶದಲ್ಲಿಯೂ ಅಗತ್ಯ ಮಾರ್ಪಾಡು ಮಾಡಲಾಗಿದೆ.
ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ–ಖಾತಾ ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸುವರ್ಣಾವಕಾಶ ಕಲ್ಪಿಸಿದೆ. ತಂತ್ರಾಂಶದ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರ ಆಸ್ತಿಗಳಿಗೆಡಿಜಿಟಲ್ ಇ-ಸ್ವತ್ತು ಪ್ರಮಾಣ ಪತ್ರ (ನಮೂನೆ- 11ಎ ಮತ್ತು ನಮೂನೆ 11ಬಿ) ವಿತರಣೆಯನ್ನು ಆರಂಭಿಸಲಾಗುತ್ತಿದೆ. ಆಸ್ತಿ ಸಂಬಂಧಿತ ಸೇವೆಗಳನ್ನು ಪಾರದರ್ಶಕವಾಗಿ ಹಾಗೂ ತ್ವರಿತವಾಗಿ ಒದಗಿಸಲು ಉದ್ದೇಶಿಸಲಾಗಿದೆ. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ವೃದ್ಧಿಗೊಳ್ಳಲಿದ್ದು, ಸ್ಥಳೀಯ ಸರ್ಕಾರವಾದ ಗ್ರಾಮಪಂಚಾಯತಿಗಳ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ.
ಇ-ಸ್ವತ್ತು (eswathu.karnataka.gov.in) ತಂತ್ರಾಂಶದ ಹೊಸ ಅವತರಣಿಕೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಹೊಸ ವ್ಯವಸ್ಥೆಯ ಆರಂಭಿಕ ದಿನಗಳಲ್ಲಿ, ಇ-ಸ್ವತ್ತು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಹಾಗೂ ಇ-ಸ್ವತ್ತು ಪ್ರಮಾಣಪತ್ರಗಳು (ನಮೂನೆ–11ಎ ಮತ್ತು ನಮೂನೆ–11ಬಿ) ಪಡೆಯುವಾಗ ಕೆಲವು ತಾಂತ್ರಿಕ ತೊಂದರೆಗಳು ಎದುರಾಗುವ ಸಾಧ್ಯತೆ ಇದೆ.
ತಂತ್ರಾಂಶದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಇಲಾಖೆ ಬದ್ದವಾಗಿದೆ. ನಾಗರಿಕರು ಸಹಕರಿಸುವಂತೆ ವಿನಂತಿಸಲಾಗಿದೆ. ಇ-ಸ್ವತ್ತು ತಂತ್ರಾಂಶದ ಮೂಲಕ ಇ-ಸ್ವತ್ತು ಪಡೆಯಲು ಎದುರಾಗುವ ಎಲ್ಲಾ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇಲಾಖೆಯಿಂದ ಇ-ಸ್ವತ್ತು ಸಹಾಯವಾಣಿ ಸಂಖ್ಯೆ: 9483476000 ಸ್ಥಾಪಿಸಲಾಗಿದೆ.
BREAKING ; ಸಂಚಾರ್ ಸಾಥಿ ಅಪ್ಲಿಕೇಶನ್ ‘ಪೂರ್ವ-ಸ್ಥಾಪನೆ’ ಕಡ್ಡಾಯ ಆದೇಶ ರದ್ದುಗೊಳಿಸಿದ ಕೇಂದ್ರ ಸರ್ಕಾರ








