ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದು ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಗಣೇಶ್ ಹತ್ಯೆ ಪ್ರಕರಣದ ತನಿಖೆ ವೇಳೆ ಬಜರಂಗದಳ ಕಾರ್ಯಕರ್ತ ಮಿಥುನ್ ಭಾಗಿಯಾಗಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಿಥುನನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಎಂಬಾತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಆರೋಪಿ ಸಂಜಯ್ ಮತ್ತು ಗಣೇಶ್ ಗುಂಪಿನ ನಡುವೆ ಗಲಾಟೆಯಾಗಿತ್ತು. ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿತ್ತು. ಸಖರಾಯಪಟ್ಟಣದ ಕಲ್ಮರಡಿ ರಸ್ತೆಯ ಬಳಿ ಗಣೇಶ್ ಮೇಲೆ ದಾಳಿ ಮಾಡಲಾಗಿತ್ತು. ಗಣೇಶ್ ಮೇಲೆ ಆರೋಪಿ ಸಂಜಯ್ ಮಚ್ಚಿನಿಂದ ದಾಳಿ ಮಾಡಿದ್ದ. ದಾಳಿಯಿಂದ ತಪ್ಪಿಸಿಕೊಳ್ಳಲು ಗಣೇಶ್ ದೊಣ್ಣೆಯಿಂದ ಪ್ರತಿದಾಳಿ ನಡೆಸಿದ್ದರು. ಆರೋಪಿಗಳಾದ ಸಂಜಯ್ ಹಾಗೂ ಭೂಷಣ್ ಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಣೇಶ್ ಹತ್ಯೆಯಲ್ಲಿ 8 ಜನರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಮಿಥುನ್ ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








