ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಲಬುರಗಿ, ಶಿವಮೊಗ್ಗ, ಬೀದರ್, ತುಮಕೂರು ಮತ್ತು ಹಾಸನ ಜಿಲ್ಲೆಗಳಿಗೆ ನಾನು ಭೇಟಿ ನೀಡಿದ್ದಾಗ ಅಕ್ರಮ ಮದ್ಯ ಮಾರಾಟ ಮತ್ತು ಹೆಚ್ಚುತ್ತಿರುವ ಮದ್ಯದಂಗಡಿಗಳ ಬಗ್ಗೆ ಮಹಿಳೆಯರು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮದ್ಯ ಮಾರಾಟದಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಚಿಂತನೆ ನಡೆಸಬೇಕು ಎಂದು ಪತ್ರದಲ್ಲಿ ಅವರು ಕೋರಿದ್ದಾರೆ.








